ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ತಮ್ಮ ನಡುವೆ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.
ತಮ್ಮಿಬ್ಬರ ನಡುವಿನ ಸಂಬಂಧದ ಬಗ್ಗೆ ನಡೆಯುತ್ತಿರುವ ಚರ್ಚೆಗಳು ಸಂಪೂರ್ಣ ಅನವಶ್ಯಕವಾಗಿದ್ದು, ನಮ್ಮ ನಡುವಿನ ಬಾಂಧವ್ಯ ಎಂದಿಗೂ ಹಾಳಾಗಿಲ್ಲ ಎಂದು ಅವರು ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, "ಮೊದಲಿನಿಂದಲೂ ನಾನು ಇದನ್ನೇ ಹೇಳುತ್ತಾ ಬಂದಿದ್ದೇನೆ, ನಮ್ಮ ನಡುವೆ ಯಾವುದೇ ಗೊಂದಲಗಳಿಲ್ಲ. ಕೆಲವು ಐಟಿ ಸೆಲ್‌ನವರು ಈ ವಿಷಯಕ್ಕೆ ಹೆಚ್ಚಿನ ಪ್ರಚಾರ ನೀಡಿದ್ದರಿಂದ ಅನವಶ್ಯಕವಾಗಿ ಈ ಚರ್ಚೆ ಮುನ್ನೆಲೆಗೆ ಬಂದಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದೇ ವೇಳೆ, ಪಕ್ಷದಾಚೆಗೂ ಅಹಿಂದ ಸಂಘಟನೆಯನ್ನು ಬಲಪಡಿಸುವ ಕೆಲಸವನ್ನು ತಾವು ಮುಂದುವರಿಸುವುದಾಗಿ ಅವರು ತಿಳಿಸಿದರು.

